Monday, October 6, 2025
Google search engine

Homeರಾಜ್ಯಸುದ್ದಿಜಾಲಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 13,000 ಕೋಟಿ ರೂ: ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 13,000 ಕೋಟಿ ರೂ: ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13000 ಕೋಟಿ ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ನಮ್ಮ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡ್ತಾ ಇರುವುದೂ ನಮ್ಮದೇ  ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖಾಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು  ವಿತರಿಸಿ ಮಾತನಾಡಿದರು.

ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ. ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ ಕಾರಣಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಟ್ಟೆಕಿಚ್ಚು ಪಡುತ್ತಿದ್ದಾರೆ.

ನಾವು ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ಹಣವನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ. ಇದರಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಜನರ ತಲಾ ಆದಾಯ ಹೆಚ್ಚಾಗಿ ರಾಜ್ಯದ ಆರ್ಥಿಕತೆ ಪ್ರಗತಿ ಕಂಡಿದೆ. ಈ ಬಗ್ಗೆ ಸಾಕಷ್ಟು ವರದಿಗಳು ಬಂದಿವೆ.

ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ನಂಬರ್ ಟು ಇದ್ದೇವೆ‌. ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ. ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದವರ ಪ್ರಗತಿಗಾಗಿ ಯೋಜನೆ ರೂಪಿಸಿದೆವು‌‌ ಹೀಗಾಗಿ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಸೇರಿ ರಾಜ್ಯದ ಆರ್ಥಿಕತೆಯನ್ನು ಪ್ರಗತಿಗೆ ಕೊಂಡೊಯ್ದಿದ್ದಾರೆ.

ಕೊಪ್ಪಳ ಜಿಲ್ಲೆಯೊಂದರಲ್ಲೇ 9 ಕೋಟಿ 22 ಲಕ್ಷ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಜಿಲ್ಲೆಗೆ 330 ಕೋಟಿ ಖರ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,17,776 ಫಲಾನುಭವಿಗಳಿಗೆ ₹1,283 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2,75,903 ಫಲಾನುಭವಿಗಳಿಗೆ ₹290 ಕೋಟಿ ಕೊಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 1.96 ಕೋಟಿ ಜನರಿಗೆ ₹320 ಕೋಟಿ ಮೊತ್ತದ 39.097 ಮೆಟ್ರಿಕ್ ಟನ್ ದವಸಧಾನ್ಯಗಳನ್ನು ವಿತರಿಸಲಾಗಿದೆ. ಬೊಕ್ಕಸ ಖಾಲಿ ಆಗಿದ್ದರೆ ಇಷ್ಟೊಂದು ಪ್ರಮಾಣದ ಹಣವನ್ನು ಜನರಿಗೆ ಕೊಡಲಾಗುತ್ತಿತ್ತಾ?

ಜಿಎಸ್‌ಟಿ ಜಾರಿ ಮಾಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಎಂಟು ವರ್ಷಗಳ ಕಾಲ ನಿರಂತರವಾಗಿ ರಾಜ್ಯದ ಮತ್ತು ದೇಶದ ಜನರ ಸುಲಿಗೆ ನಡೆಸಿತು. ನಾವು ಜಿಎಸ್‌ಟಿ ಸುಲಿಗೆ ವಿರೋಧಿಸಿ ಸರಳೀಕರಣಕ್ಕೆ ಆಗ್ರಹಿಸಿದ್ದೆವು. ಎಂಟು ವರ್ಷದ ಸುಲಿಗೆ ಬಳಿಕ ಸುಲಿಗೆ ನಡೆಸಿದವರೇ ಸರಳೀಕರಣದ ಕ್ರೆಡಿಟ್‌ಗಾಗಿ ಒದ್ದಾಡುತ್ತಿದ್ದಾರೆ. ಈಗಲೂ ಕೇಂದ್ರದಿಂದ 15 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. 15ನೇ ಹಣಕಾಸು ಆಯೋಗದಿಂದಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಪಾರ್ಲಿಮೆಂಟಿನಲ್ಲಿ ತುಟಿ ಬಿಚ್ಚಿ ಪ್ರಶ್ನಿಸಲಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿ ಪಡಿಸಲು ಮನವಿ ಮಾಡಿದರೂ ನರೇಂದ್ರ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತಾರಾಮನ್ ಅವರೂ ಮಾಡಲಿಲ್ಲ.

ಮುಕ್ಕುಂಬಿ ಕೆರೆಗೆ ನೀರು ಹರಿಸಿದ್ದು ನಾವು. ಈಗ ಯಲಬುರ್ಗಾ ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ ₹650 ಕೋಟಿ ಹಣ ಕೊಡುತ್ತಿದ್ದೇವೆ. ಇದೂ ನಮ್ಮ- ನಿಮ್ಮ ಸರ್ಕಾರದ ಹಣ.

ನಾನು ಕೊಪ್ಪಳಕ್ಕೆ ಕಾಲಿಟ್ಟಾಗಲೆಲ್ಲಾ ಮೈಸೂರಿಗೇ ಕಾಲಿಟ್ಟಷ್ಟು ಖುಷಿ ಆಗುತ್ತದೆ. ನಿಮ್ಮ ಪ್ರೀತಿಗೆ ಸದಾ ಋಣಿ. ರಾಜೀವ್ ಗಾಂಧಿ ಅವರ ಹತ್ಯೆ ಆಗದೇ ಹೋಗಿದ್ದರೆ ನಾನು ಕೊಪ್ಪಳ ಲೋಕಸಭಾ ಸದಸ್ಯ ಆಗಿರುತ್ತಿದ್ದೆ. ನಿಮ್ಮ ಪ್ರೀತಿಯ ಋಣ ನನ್ನ ಮೇಲಿದೆ‌. ಅರ್ಧ ಋಣ ತೀರಿಸಿದ್ದೇನೆ. ಉಳಿದ ಋಣವನ್ನೂ ತೀರಿಸ್ತೇನೆ.

ಮುಖ್ಯಮಂತ್ರಿ ಅವರು ಇಂದು ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ರೂ.2,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು

RELATED ARTICLES
- Advertisment -
Google search engine

Most Popular