ನಾಳೆ ಮತದಾನ, ಶಾಂತಿಯುತ ಮತದಾನಕ್ಕೆ ಅಂತಿಮ ಸಿದ್ದತೆ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಗೆ ನಾಳೆ ನ.೧೩ ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ನಾಳೆ ನ.೧೩ ರಂದು ಬೆಳಿಗ್ಗೆ ೦೫.೩೦ ಗಂಟೆಗೆ ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಅಣಕು ಮತದಾನ ನಡೆಯಲಿದೆ. ನಂತರ ಬೆಳಿಗ್ಗೆ ೦೭ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ ೦೬ ಗಂಟೆಯವರೆಗೆ ನಡೆಯಲಿದೆ.
ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು ೨,೩೬,೪೦೨ ಮತದಾರರಿದ್ದಾರೆ. ೧,೧೭,೯೩೫ ಪುರುಷ ಮತದಾರರು, ೧,೧೮,೪೩೮ ಮಹಿಳೆ ಮತದಾರರು ಹಾಗೂ ೨೯ ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು ೨೫೩ ಮತಗಟ್ಟೆ ಗಳಿವೆ ಎಂದು ಮಾಹಿತಿ ನೀಡಿದರು. ನಗರ ವ್ಯಾಪ್ತಿಯಲ್ಲಿ ೬೮ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ೧೮೫ ಮತದಾನ ಕೇಂದ್ರಗಳಿವೆ. ಸಂಡೂರು ೧೭, ತೋರಣಗಲ್ಲು ೨೭ ಮತ್ತು ಚೋರನೂರು ೧೬ ಮತಗಟ್ಟೆ ಸೇರಿ ಒಟ್ಟು ೬೦ ಮತಗಟ್ಟೆ ಗಳನ್ನು ಕ್ರಿಟಿಕಲ್ ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ ಎಂದರು.
ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಸಂಡೂರು ವಿಧಾನಸಭೆ ಉಪಚುನಾವಣೆಗೆ ೩೨೪ ಬ್ಯಾಲೆಟ್ ಯುನಿಟ್, ೩೨೪ ಕಂಟ್ರೋಲ್ ಯುನಿಟ್ ಮತ್ತು ೩೭೯ ವಿವಿಪ್ಯಾಟ್ ಮತಯಂತ್ರಗಳನ್ನು ಬಳಸಲಾಗುವುದು. ಹೆಚ್ಚುವರಿಯಾಗಿ ೩೦೪ ಬ್ಯಾಲೆಟ್ ಯುನಿಟ್, ೩೦೪ ಕಂಟ್ರೋಲ್ ಯುನಿಟ್ ಮತ್ತು ೩೨೯ ವಿವಿಪ್ಯಾಟ್ ಮತಯಂತ್ರಗಳು ಇರಿಸಲಾಗಿದೆ ಎಂದರು.
ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ತಪ್ಪದೇ ಮತದಾನ ಮಾಡಿ: ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ತಪ್ಪದೇ ಪಾಲ್ಗೊಳ್ಳಲು ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಅರೆ ಎಲ್ಲ ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಿರುವುದರಿಂದ ಪ್ರತಿಯೊಬ್ಬರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸಂಡೂರು ಭಾಗದಲ್ಲಿ ಹೆಚ್ಚು ಕೈಗಾರಿಕಾ ವಲಯ ಇರುವುದರಿಂದ ಎಲ್ಲಾ ಕಾರ್ಮಿಕರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ: ಸಂಡೂರು ವಿಧಾನಸಭೆ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಮುಗಿದ ನಂತರ ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಮತಯಂತ್ರಗಳ ಡಿ-ಮಸ್ಟರಿಂಗ್ ಕಾರ್ಯ ಇಲ್ಲಿಯೇ ನಡೆಸಲಾಗುವುದು. ಬಳಿಕ ಮತಯಂತ್ರಗಳನ್ನು ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಸ್ಥಳಾಂತರಿಸಲಾಗುವುದು. ಇಲ್ಲಿಯೇ ನ.೨೩ ರಂದು ಮತದಾನ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಮಾತನಾಡಿ, ಸಂಡೂರು ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿ ಚುನಾವಣೆ ನಡೆಸಲು ಅಗತ್ಯ ಬಂದೋಬಸ್ತ್ ಮಾಡಲಾಗಿದೆ. ಸುಮಾರು ೧೦೩೬ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಸಿಬ್ಬಂದಿ ವ್ಯವಸ್ಥೆ: ಸಿವಿಲ್ ಪೊಲೀಸ್-೬೭೬, ಡಿವೈಎಸ್ಪಿ ೦೩, ಪಿಐ ೦೬, ಪಿಎಸ್‌ಐ ೧೪, ಎಎಸ್‌ಐ ೨೨, ಹೆಚ್‌ಸಿ ೧೯೦, ಕಾನ್ಸ್ ಟೇಬಲ್ ೨೮೧, ಗೃಹರಕ್ಷಕ ದಳ ೧೬೦, ಕೆಎಸ್‌ಆರ್‌ಪಿ ೩೬೦ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಒಟ್ಟು ೧೦೩೬ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.