Sunday, April 20, 2025
Google search engine

Homeರಾಜ್ಯಸುದ್ದಿಜಾಲಸೆ. 15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಸೆ. 15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಚಾಮರಾಜನಗರ: ಕರ್ನಾಟಕ ಸರ್ಕಾರವು ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಆಚರಣೆಯ ಭಾಗವಾಗಿ ಸೆಪ್ಟೆಂಬರ್ 15ರಂದು ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಮಹತ್ತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಚಾಮರಾಜನಗರ ಜಿಲ್ಲೆಯಲ್ಲಿಯೂ ಈ ಅರ್ಥಪೂರ್ಣ ಕಾರ್ಯಕ್ರಮದ ಆಯೋಜನೆಗೆ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಸಂಬಂಧ ಅಧಿಕಾರಿಗಳೊಂದಿಗೆ ಜೂಮ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು. ಭಾರತ ಸಂವಿಧಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಸಂವಿಧಾನದ ಪೀಠಿಕೆಯನ್ನ ಓದುವರು. ಇದೇ ಸಮಯಕ್ಕೆ ಚಾಮರಾಜನಗರ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ, ಗ್ರಾಮ ಪಂಚಾಯಿತಿ, ವಾರ್ಡ್‍ವಾರು, ಸರ್ಕಾರಿ, ಖಾಸಗಿ ಕಚೇರಿ, ಶಾಲಾ ಕಾಲೇಜು, ಸ್ಥಳೀಯ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲೆಡೆ ಏಕಕಾಲದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಆಯೋಜನೆ ಮಾಡಬೇಕು. ಇದಕ್ಕಾಗಿ ಸಕಲ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಅಂದು ಬೆಳಿಗ್ಗೆ ಜಾಥಾ ಹೊರಡಲು ಅಗತ್ಯ ಸಿದ್ದತೆ ಮಾಡಬೇಕು. ಚಾಮರಾಜನಗರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಓದುವ ಬೃಹತ್ ಕಾರ್ಯಕ್ರಮ ಏರ್ಪಾಡು ಮಾಡಬೇಕು. ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರೆಲ್ಲರೂ ಭಾಗಿಯಾಗುವಂತೆ ಕಾರ್ಯಕ್ರಮ ರೂಪುಗೊಳ್ಳಬೇಕು ಎಂದರು.

ತಾಲೂಕು, ಗ್ರಾಮ ಪಂಚಾಯಿತಿ, ವಾರ್ಡುಗಳಲ್ಲಿಯೂ, ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಏರ್ಪಾಡು ಮಾಡುವುದರೊಂದಿಗೆ ಜಾಥಾಗಳನ್ನು ನಡೆಸಬೇಕು. ಸ್ಥಳೀಯ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಸದಸ್ಯರು ಸೇರಿದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಅರ್ಥಪೂರ್ಣವಾಗಿ ಕಾರ್ಯಕ್ರಮ ಏರ್ಪಡಿಸಬೇಕು. ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಪ್ರಜಾಪ್ರಭುತ್ವದ ದಿನ ಆಚರಣೆಯ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಸೂಕ್ತ ಸಲಹೆ ಪಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಲಹಾ ಸಮಿತಿಗಳನ್ನು ರಚಿಸಬೇಕು. ಸಮಿತಿಯಲ್ಲಿ ವಿವರವಾಗಿ ಚರ್ಚಿಸಿ ಕಾರ್ಯಕ್ರಮ ಆಯೋಜನೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ನಗರಸಭೆ ಆಯುಕ್ತರಾದ ಎಸ್.ವಿ. ರಾಮ್‍ದಾಸ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular