ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಬರೋಬ್ಬರಿ ಆರು ತಿಂಗಳ ಬಳಿಕ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದೆ. ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್‌ನಲ್ಲಿ ಶುಕ್ರವಾರ ಸಂಜೆ ನಡೆಸಲಾದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ನಿರ್ಣಾಯಕ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲಾಗಿದೆ.
66 ರ ಹರೆಯದ ಅಶೋಕ್ ಅವರು ಆರ್ ಎಸ್ ಎಸ್ ಹಿನ್ನಲೆ ಹೊಂದಿದ್ದು, ಈ ಹಿಂದೆ ವಿಧಾನಸಭೆಯ ವಿಪಕ್ಷದ ಉಪನಾಯಕರಾಗಿ (2014-2018), ಉಪಮುಖ್ಯಮಂತ್ರಿಯಾಗಿ, ಕಂದಾಯ , ಗೃಹ ಮತ್ತು ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.