ಬೆಂಗಳೂರು : ಸುಪ್ರೀಂ ಕೋರ್ಟ್ ಸಿಜೆಐ ಆಗಿರುವಂತಹ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯ ವಕೀಲರೊಬ್ಬರು ಶೂ ಎಸೆದಿರುವ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿರಿಯ ವಕೀಲ ಭಕ್ತವತ್ಸಲ ಎಂಬುವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ.6ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ರಾಕೇಶ್ ಕಿಶೋರ್ ಏಕಾಏಕಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಕಡೆ ವಸ್ತು ಎಸೆದಿದ್ದರು.
ಇದು ಕಾನೂನುಬಾಹಿರ. ಕೂಡಲೇ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಕ್ತವತ್ಸಲ ದೂರಿನಲ್ಲಿ ಕೋರಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದರು.