ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 5ನೇ ಪುಣ್ಯ ಸ್ಮರಣೆಯ ಪ್ರಯುಕ್ತ ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ಬೆಳಗಿನ ಜಾವದಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು.
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯ ನೇತೃತ್ವದಲ್ಲಿ ರುದ್ರಾಭಿಷೇಕ, ಶಿವಕುಮಾರ ಸ್ವಾಮೀಜಿಯ ಗದ್ದುಗೆ ಪೂಜೆ ನೆರವೇರಿತು. ನಂತರ ಗದ್ದುಗೆಯಿಂದ ಬಸವೇಶ್ವರ ಬಡಾವಣೆಯ ವರೆಗೆ ಶಿವಕುಮಾರ ಸ್ವಾಮೀಜಿಯ ವಿಗ್ರಹದ ಮೆರವಣಿಗೆ ನಡೆಯಿತು. ವಿವಿಧ ಮಠಗಳ ಸ್ವಾಮೀಜಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
ಮಠಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರತಿ ಸಾಲಿನಲ್ಲಿ ನಿಂತುಕೊಂಡು ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಠದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಠಕ್ಕೆ ಆಗಮಿಸುವ ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ,ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಹಲವರು ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶಿವಕುಮಾರ ಸ್ವಾಮೀಜಿಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಮಠದ ಆವರಣದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಿರುವ ‘ಸ್ಮೃತಿ ವನ’ ಉದ್ಘಾಟಿಸಲಿದ್ದಾರೆ.