Saturday, April 4, 2026
Google search engine

Homeರಾಜ್ಯಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಪ್ರಕಟಣೆ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಪ್ರಕಟಣೆ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಫಲಿತಾಂಶ ಮತ್ತು ಮುಂದಿನ ಪರೀಕ್ಷೆಗಳ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏ.5 ರಿಂದ ಏ.20ರವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದ್ದು, ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಶೇ.2 ರಿಂದ 3 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ : ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಅಥವಾ ಅಂಕ ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಪರೀಕ್ಷೆ-2 ಅನ್ನು ಮೇ 18 ರಿಂದ ಮೇ 25ರವರೆಗೆ ನಡೆಸಲು ಮಂಡಳಿಯು ನಿರ್ಧರಿಸಿದ್ದು, ಈ ಪರೀಕ್ಷೆಯ ಫಲಿತಾಂಶವು ಜೂನ್ 1ರಂದು ಪ್ರಕಟವಾಗುವ ಸಾಧ್ಯತೆಯಿದೆ. ವಿಷಯವಾರು ಸವಿಸ್ತಾರವಾದ ವೇಳಾಪಟ್ಟಿಯನ್ನು ಮಂಡಳಿಯು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದೆ.

ಪಿಯುಸಿ ಫಲಿತಾಂಶ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7ರಂದು ಹೊರಬೀಳುವ ನಿರೀಕ್ಷೆಯಿದೆ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯಗೊಳ್ಳುವ ಸಮಯ ಹತ್ತಿರ ಬಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 7 ರಂದು ಪ್ರಕಟವಾಗುವ ದಟ್ಟ ಸಾಧ್ಯತೆಗಳಿವೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಪರೀಕ್ಷಾ ವಿವರ : ಈ ಬಾರಿ ಫೆ.28 ರಿಂದ ಮಾ.17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಮಾರ್ಚ್ 20 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು. ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಬಹುತೇಕ ಪೂರ್ಣಗೊಂಡಿದೆ.

ಶಿಕ್ಷಣ ಇಲಾಖೆಯು ಈಗಾಗಲೇ ಸಂಭಾವ್ಯ ದಿನಾಂಕವನ್ನು ಘೋಷಿಸಿದ್ದು, ಏಪ್ರಿಲ್ 7 ರಂದು ಅಧಿಕೃತವಾಗಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

RELATED ARTICLES
- Advertisment -
Google search engine

Most Popular