ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ಸಮಯ ಕೋರಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಕಚೇರಿ ಮೂಲಗಳು ಈ ಮಾಹಿತಿಯನ್ನು ದೃಢಪಡಿಸಿವೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಲವು ಸುತ್ತಿನ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಬಳಿಕ ನಾಯಕತ್ವದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



