ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ರೋಗಿಯ ಆರೋಗ್ಯ ಸ್ಥಿತಿಯ ಬಗ್ಗೆ ಎರಡು ವೈದ್ಯಕೀಯ ಮಂಡಳಿಗಳ ವರದಿಗಳನ್ನು ಪರಿಗಣಿಸಿದ ನ್ಯಾಯಾಲಯ, ತನ್ನ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಿದ ಮೊದಲ ಪ್ರಕರಣ ಎಂದು ಹೇಳಲಾಗಿದೆ.
ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ 2013ರಲ್ಲಿ ಪೇಯಿಂಗ್ ಗೆಸ್ಟ್ನ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಅವರು ಕೋಮಾಗೆ ಜಾರಿದ್ದರು. ಬಳಿಕ ಹಲವು ವರ್ಷಗಳ ಕಾಲ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.
ಹರೀಶ್ ರಾಣಾ ಅವರ ಪೋಷಕರು ಮಗನ ಸ್ಥಿತಿ ಹಾಗೂ ದೀರ್ಘಕಾಲದ ಚಿಕಿತ್ಸೆಯಿಂದಾಗುತ್ತಿರುವ ಕಷ್ಟವನ್ನು ಗಮನಿಸಿ ದಯಾಮರಣಕ್ಕೆ ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರ ಪೀಠ ಮಹತ್ವದ ತೀರ್ಪು ನೀಡಿದೆ.
ಪ್ರಾಥಮಿಕ ಮತ್ತು ದ್ವಿತೀಯ ವೈದ್ಯಕೀಯ ಮಂಡಳಿಗಳು ರೋಗಿಯ ಜೀವ ಬೆಂಬಲವನ್ನು ಹಿಂತೆಗೆದುಕೊಳ್ಳಬಹುದೆಂದು ಸೂಚಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಅನುಮತಿ ನೀಡಿದೆ. ಇದೇ ವೇಳೆ ದಯಾಮರಣ ಕುರಿತು ಸ್ಪಷ್ಟ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸಲಹೆ ನೀಡಿದೆ.



