ಬೆಂಗಳೂರು : ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆಯಾಗಿದ್ದು, ಯಾವುದೇ ಹಂತದ ಅಧಿಕಾರಿ ಅಥವಾ ಸಿಬ್ಬಂದಿ ಅಶಿಸ್ತು ಪ್ರದರ್ಶಿಸಿದರೆ ಮುಲಾಜಿಲ್ಲದೆ ಅಮಾನತು ಅಥವಾ ವಜಾ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಆಡುಗೋಡಿಯ ಸಿಎಆರ್ ದಕ್ಷಿಣ ಕವಾಯಿತು ಮೈದಾನದಲ್ಲಿ ನಡೆದ ಮಾಸಿಕ ಪರೇಡ್ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಅಶಿಸ್ತು ತೋರಿದ ಕೆಲ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯದಲ್ಲಿ ಲೋಪ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡಲಾಗುವುದು ಎಂದು ಹೇಳಿದರು.
ತುರ್ತು ಸೇವೆ 112ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಹಿಂದೆ ಘಟನಾ ಸ್ಥಳಕ್ಕೆ ತಲುಪಲು ಸರಾಸರಿ 13 ನಿಮಿಷ ಬೇಕಾಗುತ್ತಿತ್ತು. ಇದೀಗ ಕೇವಲ 6 ನಿಮಿಷ 30 ಸೆಕೆಂಡ್‌ಗಳಲ್ಲಿ ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಾರೆ. ಇದು ಬೆಂಗಳೂರು ಪೊಲೀಸರ ಕಾರ್ಯಕ್ಷಮತೆಯನ್ನು ತೋರಿಸುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರುದಂತಹ ಮಹಾನಗರದಲ್ಲಿ ಸಂಕಷ್ಟದಲ್ಲಿರುವ ನಾಗರಿಕರಿಗೆ ತ್ವರಿತ ಸ್ಪಂದನೆ ಅತ್ಯಂತ ಮುಖ್ಯ. 112ಕ್ಕೆ ಕರೆ ಬಂದ ತಕ್ಷಣ ಸಮೀಪದ ಪೊಲೀಸ್ ವಾಹನವನ್ನು ಸ್ಥಳಕ್ಕೆ ಕಳುಹಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ರಾಜ್ಯ ಸರ್ಕಾರ ಆರಂಭಿಸಿರುವ ‘ರೈಸ್’ ಹಾಗೂ ‘ಬೇಡ ಬ್ರೋ’ ಅಭಿಯಾನಗಳಲ್ಲಿ ಪೊಲೀಸ್ ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು.
ನಗರದಲ್ಲಿ ಸುಮಾರು 20 ಸಾವಿರ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಕರ್ತವ್ಯದ ವೇಳೆ ಡ್ರಗ್ಸ್ ಸೇವನೆ, ಸಾಗಾಟ ಅಥವಾ ಮಾರಾಟ ಕಂಡುಬಂದರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಒಂದು ವರ್ಷದಲ್ಲಿ ಸುಮಾರು 350 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ ಎಂದರು. ಸರ್ಕಾರದ ಬದಲಾವಣೆಯ ಸಂದರ್ಭದಲ್ಲಿಯೂ ಪೊಲೀಸರು ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿದ್ದಾರೆ. ಮುಂದೆಯೂ ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಂಡು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.



