ರಾಮನಗರ: ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.
ಅವರು ಇಂದು ಹಾರೋಹಳ್ಳಿ ತಾಲ್ಲೂಕು ಕಚೇರಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕ ಕುಂದುಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬಹುದಾದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಗೃಹಲಕ್ಷ್ಮಿ, ಗೃಹಜ್ಯೋತಿ, ರಸ್ತೆ, ಕಂದಾಯ, ಅರಣ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಕೃಷಿ, ಪೊಲೀಸ್ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಸ್ಥಳದಲ್ಲಿಯೇ ಪರಿಹಾರ ನೀಡುವಂತಹ ಸಮಸ್ಯೆಗಳನ್ನು ಜನತಾ ದರ್ಶನ ಕಾರ್ಯಕ್ರಮಲ್ಲಿಯೇ ಇತ್ಯರ್ಥಪಡಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಕಾರ್ಯಕ್ರಮವು ನಿರಂತರವಾಗಿ ನಡೆಯುತ್ತಾ ಇರುತ್ತದೆ. ಸಾರ್ವಜನಿಕ ಕುಂದುಕೊರತೆಗಳನ್ನು ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಸಬಹುದು ಎಂದು ತಿಳಿಸಿದರು.
ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೧೧೦ ಅರ್ಜಿಗಳು, ನಗರಸಭೆಯ ೨೦ ಅರ್ಜಿಗಳು ಹಾಗೂ ಇತರೆ ಇಲಾಖೆಗೆ ಸಂಬಂಧಿಸಿದ ೧೦ ಅರ್ಜಿಗಳು ಸೇರಿ ಒಟ್ಟು ೧೪೦ ಅರ್ಜಿಗಳು ಸ್ವೀಕೃತಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹಾರೋಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ, ತಹಶೀಲ್ದಾರರಾದ ವಿಜಯೇಂದ್ರ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
