ಮಂಡ್ಯ: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವು ಜೂನ್ 28 ರಂದು ಜುಲೈ 01 ರವರಿಗೆ ನಡೆಯಲಿದ್ದು, ೦-5 ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನಗಳಲ್ಲಿ ಕೆಲವು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚಿನ ನಿಗಾ ವಹಿಸುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದು ತಿಳಿಸಿದ ಅವರು, ಪೋಲಿಯೋ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಜಿಲ್ಲೆಯಾದ್ಯಂತ ಜೂನ್ 28 ರಿಂದ ಜುಲೈ 01 ರವರಿಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ೦-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಪೋಷಕರು ತಪ್ಪದೇ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ಹಾಕಿಸುವುದರೊಂದಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಜೂನ್ 28 ರಂದು ಜಿಲ್ಲೆಯಾದ್ಯಂತ ಬೂತ್ಗಳಲ್ಲಿ ಲಸಿಕೆ ಹಾಕಲಾಗುವುದು. ಜೂನ್ 29 ರಿಂದ ಜುಲೈ 1 ರವರೆಗೆ ಲಸಿಕೆ ಹಾಕದ ಮಕ್ಕಳನ್ನು ಪತ್ತೆಹಚ್ಚಲು ಮನೆ ಮನೆಗೆ ಭೇಟಿ ನೀಡಲಾಗುವುದು. ಮನೆ ಮನೆಗೆ ತೆರಳಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು. ಯಾವುದೇ ಕಾರಣಕ್ಕೂ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪೋಲಿಯೊ ನಿರ್ಮೂಲನೆ ಮಾಡುವಲ್ಲಿ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರಬಾರದು. ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಿ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಜೂನ್ನಲ್ಲಿ ನಡೆಯಲಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ೦-5 ವರ್ಷದೊಳಗಿನ ಒಟ್ಟು ಅಂದಾಜು 1,13, 034 ಮಕ್ಕಳಿಗೆ ಲಸಿಕೆ ಹಾಕಲು ಗುರಿ ನೀಡಲಾಗಿದ್ದು ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 723 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
ಜಿಲ್ಲೆಯಲ್ಲಿ ಕಸ ವಿಲೇವಾರಿ ಮಾಡುವ ವಾಹನಗಳಲ್ಲಿ ಜಿಂಗಲ್ ಅಳವಡಿಸುವ ಮೂಲಕ ಹೆಚ್ಚು ಹೆಚ್ಚು ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು.
ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ಲಸಿಕಾ ಪಡೆಯುವಂತೆ ಹೆಚ್ಚು ಜಾಗೃತಿ ಮೂಡಿಸಬೇಕು. ಕರ ಪತ್ರ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚು ಪ್ರಚಾರ ನೀಡಬೇಕು.
ಲಸಿಕಾ ಕಾರ್ಯಕ್ರಮ ದಿನದಂದು ವೈದ್ಯರು ಗೈರು ಹಾಜರಾಗದಂತೆ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಲ್ಸ್ ಪೊಲೀಯೋ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದರು.
ಸಭೆಯಲ್ಲಿ ಎಸ್. ಬಿ. ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳು ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮೀರಾಶಿವಲಿಂಗಯ್ಯ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಕೆ. ಮೋಹನ್, ನಿವೃತ್ತ ಡಿ. ಹೆಚ್. ಒ. ಡಾ. ಟಿ. ಎನ್. ಮರೀಗೌಡ,ಜಿಲ್ಲಾ ಆರ್. ಸಿ. ಹೆಚ್ ಅಧಿಕಾರಿ ಡಾ. ಕೆ. ಪಿ. ಅಶ್ವಥ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.



