ಪಿರಿಯಾಪಟ್ಟಣ: ದಸರಾ ಹಬ್ಬ ನಮ್ಮ ನಾಡಿನ ಹೆಮ್ಮೆಯ ಸಂಸ್ಕೃತಿಯ ಪ್ರತೀಕ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ ತಿಳಿಸಿದರು.
ಪಟ್ಟಣದ ಹರವೆ ಮಲ್ಲರಾಜಪಟ್ಟಣ ಬಳಿಯ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶ್ರೀ ಸೋಮೇಶ್ವರ ಕ್ರೀಡಾ ಸಂಸ್ಥೆ ಭೋಗನಹಳ್ಳಿ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಸರಾ ಕ್ರೀಡಾಕೂಟದ ಸ್ಪರ್ಧಿಗಳಲ್ಲಿ ವಯಸ್ಸಿನ ಮಿತಿ ಇಲ್ಲದಿರುವುದರಿಂದ ಆಸಕ್ತಿಯುಳ್ಳವರು ಪಾಲ್ಗೊಳ್ಳುವ ಮೂಲಕ ತಮ್ಮಲ್ಲಿನ ಕ್ರೀಡಾ ಪ್ರತಿಭೆ ಪ್ರದರ್ಶಿಸಬೇಕು. ತಾಲೂಕು ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯ ಕೊರತೆಯಿದ್ದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದರು.

ನಿವೃತ್ತ ಸೈನಿಕ ರಾವಂದೂರು ಶಿವು ಅವರು ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು, ಶಿವು ಸೈನಿಕ ಅಕಾಡೆಮಿ ವತಿಯಿಂದ ಗ್ರಾಮಾಂತರ ಪ್ರದೇಶದ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತವಾಗಿ ದೈಹಿಕ ತರಬೇತಿ ನೀಡಲಾಗುತ್ತಿದ್ದು ಸದ್ಬಳಕೆ ಮಾಡಿಕೊಳ್ಳಲು ಕೋರಿದರು.
ರಾವಂದೂರು ಪಿಎಸಿಸಿಎಸ್ ಅಧ್ಯಕ್ಷ ಮರಿಗೌಡ ಅವರು ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ, ಗ್ರಾಮಾಂತರ ಪ್ರದೇಶದ ಪ್ರತಿಭೆಗಳ ಅನಾವರಣಕ್ಕೆ ಸೂಕ್ತ ವೇದಿಕೆ ದೊರೆತು ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದರು.
ಕ್ರೀಡಾಕೂಟ ಸಂಚಾಲಕ ಹಾಗೂ ಹಾಕಿ ತರಬೇತುದಾರರಾದ ಸುಂದರೇಶ್ ಅವರು ಮಾತನಾಡಿ ದಸರಾ ಸಂದರ್ಭ ಪ್ರತಿವರ್ಷ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಜಿಲ್ಲೆ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಗ್ರಾಮಾಂತರ ಪ್ರದೇಶದ ಪ್ರತಿಭೆಗಳು ಪಾಲ್ಗೊಳ್ಳಲು ಇಲಾಖೆ ವತಿಯಿಂದ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು. ಈ ವೇಳೆ ಪುರುಷ ಹಾಗೂ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭ ಸೋಮೇಶ್ವರ ಕ್ರೀಡಾ ಸಂಸ್ಥೆ ಸಂಘಟನಾ ಕಾರ್ಯದರ್ಶಿ ಶರತ್, ನಿವೃತ್ತ ಸೈನಿಕ ಸ್ವಾಮಿ, ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ಸುರೇಶ ನಾಯಕ್, ದೇವರಾಜ್, ಕ್ರೀಡಾ ಅಧಿಕಾರಿಗಳು, ಆರೋಗ್ಯ ಮತ್ತು ಆರಕ್ಷಕ ಇಲಾಖೆ ಸಿಬ್ಬಂದಿ ಮತ್ತು ಸೋಮೇಶ್ವರ ಕ್ರೀಡಾ ಸಂಸ್ಥೆ ಪದಾಧಿಕಾರಿಗಳು ಸದಸ್ಯರು ಇದ್ದರು.
