ಹುಬ್ಬಳ್ಳಿ: ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಆರೋಪಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು. ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಹಾಗೆಯೇ ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದರು.