ಸೂರತ್: ೨೦೨೪ರ ಲೋಕಸಭಾ ಚುನಾವಣೆ ಮುಕ್ತಾಯವಾಗುವುದಕ್ಕೂ ಮುನ್ನವೇ ಬಿಜೆಪಿ ಮೊದಲ ಖಾತೆ ತೆರೆದಿದೆ.
೨೦೨೪ರ ಲೋಕಸಭಾ ಚುನಾವಣೆಯಲ್ಲಿ ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಅಲ್ಲದೇ ನಾಮಪತ್ರ ಸಲ್ಲಿಸಿದ್ದ ಉಳಿದ ೮ ಮಂದಿ ಸ್ವತಂತ್ರ ಅಭ್ಯರ್ಥಿಗಳೂ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಗೆಲುವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ್ದ ಚುನಾವಣಾಧಿಕಾರಿಗಳು ಸಹಿಯನ್ನು ಪರಿಶೀಲಿಸಿದ್ದರು. ಪರಿಶೀಲಿಸಿದ ಬಳಿಕ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸಗಳಿದ್ದವು ಮತ್ತು ಅವು ನಿಜವಲ್ಲ ಎಂದು ತಿಳಿದುಬಂದಿದ್ದರಿಂದ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಸೌರಭ್ ಪರ್ಧಿ ತಿಳಿಸಿದ್ದಾರೆ.
ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ ೮ ಅಭ್ಯರ್ಥಿಗಳ ಪೈಕಿ ೭ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಘೋಷಿಸಲಾಗಿದೆ. ಬಿಜೆಪಿಯ ಮುಖೇಶ್ ದಲಾಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.