Thursday, April 17, 2025
Google search engine

Homeರಾಜ್ಯಸುದ್ದಿಜಾಲನಾಳೆ ಭರಚುಕ್ಕಿ ಜಲಪಾತೋತ್ಸವಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಂದ ಚಾಲನೆ

ನಾಳೆ ಭರಚುಕ್ಕಿ ಜಲಪಾತೋತ್ಸವಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಂದ ಚಾಲನೆ

ಚಾಮರಾಜನಗರ: ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಚೆಲುವ ಚಾಮರಾಜನಗರ ಹೆಸರಿನಡಿ ಭರಚುಕ್ಕಿ ತಾಣದಲ್ಲಿ ಜಲಪಾತೋತ್ಸವವನ್ನು ಆಗಸ್ಟ್ ೧೦ ರಂದು ಸಂಜೆ ೫ ಗಂಟೆಗೆ ಆಯೋಜಿಸಲಾಗಿದೆ.

ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರೋತ್ಸಾಹ ನೀಡಿ ಇನ್ನಷ್ಟು ಪ್ರಚುರಗೊಳಿಸುವ ಉದ್ದೇಶದೊಂದಿಗೆ ಚೆಲುವ ಚಾಮರಾಜನಗರ ಪರಿಕಲ್ಪನೆಯಡಿ ಮೊದಲ ಕಾರ್ಯಕ್ರಮವಾಗಿ ಭರಚುಕ್ಕಿ ಜಲಪಾತೋತ್ಸವವನ್ನು ನಾಳೆ ಆ. ೧೦ ರಂದು ಒಂದು ದಿನ ಹಮ್ಮಿಕೊಳ್ಳಲಾಗಿದೆ ಎಂದರು. ಜಲಪಾತವನ್ನು ಬಣ್ಣಬಣ್ಣದ ಕಂಗೊಳಿಸುವ ದೀಪದೊಂದಿಗೆ ವೀಕ್ಷಿಸಬಹುದು. ಆ. ೧೦ರಂದು ಸಂಜೆ ೫ ಗಂಟೆಗೆ ಜಲಪಾತದ ಬಳಿ ಹಾಕಲಾಗಿರುವ ವರ್ಣರಂಜಿತ ವೇದಿಕೆಯಲ್ಲಿ ಜಲಪಾತೋತ್ಸವದ ಉದ್ಘಾಟನೆ ನಡೆಯಲಿದೆ. ಬಳಿಕ ಮಲೆ ಮಹದೇಶ್ವರ ಬೆಟ್ಟ ಭಾಗದ, ಸ್ಥಳೀಯ ಸಂಸ್ಕೃತಿ, ಕಲಾ ಅನಾವರಣ ಆಗಲಿದೆ. ಇದೇ ವೇದಿಕೆಯಲ್ಲಿ ಖ್ಯಾತ ಗಾಯಕಿ ಅನನ್ಯ ಭಟ್ ಮತ್ತು ಅವರ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಜನರು ಕಾರ್ಯಕ್ರಮವನ್ನು ವೀಕ್ಷಿಸಲು ಎಲ್.ಇ.ಡಿ. ಪರದೆಗಳನ್ನು ಹಾಕಲಾಗುತ್ತಿದೆ ಎಂದು ತಿಳಿಸಿದರು.

ಭರಚುಕಿ, ಜಲಪಾತೋತ್ಸವದ ಅಂಗವಾಗಿ ಅಕರ್ಷಕ ಧ್ವನಿ-ಬೆಳಕು ಕಾರ್ಯಕ್ರಮವು ಮೂಡಿಬರಲಿದೆ. ಜಿಲ್ಲೆಯ ಪ್ರವಾಸೋದ್ಯಮ ಕುರಿತ ಕಿರು ವಿಡಿಯೋ ಬಿಡುಗಡೆ ಹಾಗೂ ಪ್ರದರ್ಶನವಿದೆ. ಎನ್.ಆರ್.ಎಲ್.ಎಂ ಮತ್ತು ಮಹಿಳಾ ಸ್ವ ಸಹಾಯ ಸಂಘಗಳು ಅವರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಆಹಾರ ತಿನಿಸು ಮಳಿಗೆಗಳು ಫುಡ್ ಕೋರ್ಟ್ ಸಹ ಇರಲಿದೆ. ಬಣ್ಣದ ಬೆಳಕಿನಲ್ಲಿ ಭರಚುಕ್ಕಿ ಜಲಾಶಯವನ್ನು ಕಣ್ಮುಂಬಿಕೊಳ್ಳಲು ಆಕರ್ಷಕವಾದ ದೀಪಾಲಂಕಾರವು ಆಗಸ್ಟ್ ೧೦ರಂದು ಸಂಜೆ ೫ ರಿಂದ ರಾತ್ರಿ ೧೦ ಗಂಟೆಯವರೆಗೆ ಇರಲಿದೆ. ಅಲ್ಲದೆ ಆಗಸ್ಟ್ ೧೧ ರಂದು ಸಂಜೆ ೬ ರಿಂದ ರಾತ್ರಿ ೮ ಗಂಟೆಯವರೆಗೆ ದೀಪಾಲಂಕಾರ ಇರಲಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ ೧೦ ರಂದು ಸಂಜೆ ೫ ಗಂಟೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡುವರು. ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಜಲಪಾತೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್. ತಂಗಡಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಎಂ.ಆರ್. ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಲೋಕಸಭಾ ಸದಸ್ಯ ಸುನೀಲ್ ಬೋಸ್, ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ, ಶಾಸಕ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್‌ಪ್ರಸಾದ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಕುದೇರಿನ ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ವೈ.ಸಿ. ನಾಗೇಂದ್ರ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಪಶು ಸಂಗೋಪನೆ ಮತ್ತು ರೇಷ್ಮೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಭರಚುಕ್ಕಿ ಜಲವಾತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ ಮೇರೆಗೆ ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಲಪಾತೋತ್ಸವ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular