ಕೋಲಾರ: ತನ್ನ ತಾಯಿಯ ಸಮಾಧಿ ಪಕ್ಕದಲ್ಲಿಯೇ ಯುವಕನೋರ್ವನ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಶನಿವಾರ ಬೆಳಗ್ಗೆ ಶ್ರೀನಿವಾಸಪುರ ತಾಲೂಕಿನ ತಾಡಿಗೊಳ್ ಕ್ರಾಸ್ ಬಳಿ ವರದಿಯಾಗಿದೆ.
ತಾಡಿಗೋಳ್ ಗ್ರಾಮದ ಪ್ರವೀಣ್ (೨೨) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪ್ರವೀಣ್, ಸಂಬಂಧಿಕರ ಮದುವೆಗೆಂದು ಕೆಲವು ದಿನಗಳ ಹಿಂದೆ ಸ್ವಗ್ರಾಮಕ್ಕೆ ಆಗಮಿಸಿದ್ದ ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪ್ರವೀಣ್ ಮೃತದೇಹ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೃತದೇಹವಹನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.