ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಶನಿವಾರ (ಸೆ 21) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯವು ಮುನಿರತ್ನ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೇ ಸರ್ಕಾರದಿಂದ ಈ ಪ್ರಕಟಣೆ ಹೊರ ಬಿದ್ದಿದೆ. ತನಿಖಾ ತಂಡದಲ್ಲಿ ಮೂವರು ಐಪಿಎಸ್ ಅಧಿಕಾರಿಗಳಾದ ಲಾಭೂರಾಮ್, ಸೌಮ್ಯಲತ ಎಸ್ ಕೆ ಮತ್ತು ಸಿ ಎಸ್ ಸೈ ಮನ್ ಅವರಿದ್ದಾರೆ.
ಮುನಿರತ್ನ ವಿರುದ್ಧದ ಮೂರು ಪ್ರಕರಣಗಳು ಮಾತ್ರವಲ್ಲದೆ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಮುನಿರತ್ನ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ನಡೆಸಲು ತಂಡಕ್ಕೆ ಸೂಚನೆ ನೀಡಲಾಗಿದೆ.