Friday, April 11, 2025
Google search engine

Homeರಾಜ್ಯದಿವ್ಯಾಂಗರಲ್ಲಿ ಶ್ರದ್ದೆ, ಬದ್ದತೆ ಹೆಚ್ಚು, ಸರ್ವತೋಮುಖ ಏಳಿಗೆಗೆ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ: ಶಾಸಕ ಕೆ.ಎಸ್.ಬಸವಂತಪ್ಪ

ದಿವ್ಯಾಂಗರಲ್ಲಿ ಶ್ರದ್ದೆ, ಬದ್ದತೆ ಹೆಚ್ಚು, ಸರ್ವತೋಮುಖ ಏಳಿಗೆಗೆ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ: ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ: ದಿವ್ಯಾಂಗ ಜನರಲ್ಲಿ ಶ್ರದ್ದೆ, ಬದ್ದತೆ ಹೆಚ್ಚಿದ್ದು ಇವರ ಸರ್ವತೋಮುಖ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ವಿಕಲಚೇತನರಿಗಾಗಿ ತ್ರಿಚಕ್ರ ಮೋಟಾರು ಸೈಕಲ್, ಪಿಂಚಣಿ, ಬಸ್ ಪಾಸ್, ಸ್ವ ಉದ್ಯೋಗಕ್ಕೆ ಸಾಲ ಸೌಲಭ್ಯ ಸೇರಿದಂತೆ ಹಲವಾರು ಸೌಲಭ್ಯ ಕಲ್ಪಿಸಿದೆ. ಆದರೆ ಅವರಿಗೆ ಆ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಾಮಾಣಿಕವಾದ ಕೆಲಸ ಮಾಡಬೇಕಾಗಿದೆ.

ಚಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತವೆ. ಆದರೆ ವಿಕಲಚೇತನರ ಪೊಷಕರು ಮೊದಲೇ ಅವರ ಪೊಷಣೆ ಮತ್ತು ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟವಾಗಿರುತ್ತದೆ. ಹೀಗಿರುವಾಗ ಅವರ ಸೌಲಭ್ಯಗಳು ಪಾರದರ್ಶಕವಾಗಿ ಸಿಗುವಂತಾಗಬೇಕೆಂದರು.
ವಿಕಲಚೇತರಿಗೆ ಕೇವಲ 50 ಸಾವಿರದಿಂದ 1 ಲಕ್ಷದವರೆಗೆ ಸಾಲಸೌಲಭ್ಯ ಕಲ್ಪಿಸಿದರೆ ಸಾಲಾದು, ಅವರಿಗೆ 10 ರಿಂದ 15 ಲಕ್ಷದವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡ್ಡಿರಹಿತ ಸಾಲಸೌಲಭ್ಯ ನೀಡಿದರೆ ಅವರು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಸ್ವಾವಲಂಬಿ ಜೀವನ ನಡೆಸಲು ಪೂರಕವಾದ ವಾತಾವರಣ ಕಲ್ಪಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ಛಲ, ಶ್ರದ್ಧೆ ಇದ್ದರೆ ಯಾವ ಕ್ಷೇತ್ರದಲ್ಲಾದರೂ ಮುಂದೆ ಬರಬಹುದು. ವಿಕಲಚೇತನರು ಸಾಲ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಿಕೊಳ್ಳಬೇಕು. ಸರ್ಕಾರಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಕಲಚೇತನರಿಂದ ಹಣ ವಸೂಲಿ ಮಾಡುವ ಬಗ್ಗೆ ಫಲಾನುಭವಿಗಳ ದೂರುಗಳು ಬರುತ್ತಿವೆ ಎಂಬ ಮಾಹಿತಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಹಾನಗರಪಾಲಿಕೆ ಮೇಯರ್ ಚಮನ್ ಸಾಬ್, ಎಎಸ್ಪಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ್, ಅಂಗವಿಕಲರ ಕಲ್ಯಾಣಾಧಿಕಾರಿ ಡಾ, ಪ್ರಕಾಶ್, ಆಶಾಕಿರಣ ಟ್ರಸ್ಟಧ್ಯಕ್ಷ ರಮಣ್‍ಲಾಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಿಕಲಚೇತನರಿಗೆ ಮೋಟಾರ್ ಸೈಕಲ್ ವಿತರಣೆ: ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಮೋಟಾರ್ ಸೈಕಲ್ ವಿತರಿಸಿದರು.

RELATED ARTICLES
- Advertisment -
Google search engine

Most Popular