ಮೈಸೂರು : ಡಿ.೯ರಿಂದ ಬೆಳಗಾವಿಯಲ್ಲಿ ಆರಂಭವಾಗುವ ವಿಧಾನಸಭೆ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಉದ್ಧೇಶಿಸಲಾಗಿದ್ದ ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮವನ್ನು ರೈತಸಂಘ ಹಿಂಪಡೆದಿದೆ ಎಂದು ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ಅಧ್ಯಕ್ಷರೂ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವರಿಷ್ಠ ನಾಯಕರೂ ಆದ ಇಂಗಲಗುಪ್ಪೆ ಕೃಷ್ಣೇಗೌಡ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಅವರು ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾವಿರಾಗು ರೈತರ ಜತೆಗೂಡಿ ಡಿ.೯ ರಿಂದ ಅನಿರ್ಧಿಷ್ಟಾವಧಿ ಕಾಲ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೇ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಜತೆಗೆ ಅದಿವೇಶನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಾಗಿಯೂ ಭರವಸೆ ನೀಡಿರುವ ಹಿನ್ನಲೆಯಲ್ಲಿ ಮಹಾ ಒಕ್ಕೂಟದ ಮುಖಂಡರ ಜತೆ ಚರ್ಚೆ ನಡೆಸಿ ಮುತ್ತಿಗೆ ಕಾರ್ಯಕ್ರಮ ಹಿಂಪಡೆದು ಅಧಿವೇಶನ ಸುಗಮವಾಗಿ ನಡೆಯಲುಸಹಕಾರ ನೀಡುವುದಾಗಿ ಇಂಗಲಗುಪ್ಪೆ ಕೃಷ್ಣೇಗೌಡ ಸ್ಪಷ್ಟಪಡಿಸಿದ್ದಾರೆ.