ಬೆಳಗಾವಿ (ಸುವರ್ಣ ವಿಧಾನಸೌಧ) : ಉತ್ತರ ಕರ್ನಾಟಕದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಗೆ ಸೋಮವಾರ(ಡಿ.೧೬)ದಿಂದ (ಡಿ.೧೮)ದ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿದ್ದಾರೆ.
ಈ ವಿಶೇಷ ಚರ್ಚೆಯಲ್ಲಿ ರಾಜ್ಯದ ಎಲ್ಲ ಭಾಗದ ಶಾಸಕರು ಪಾಲ್ಗೊಂಡು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಬೇಕು. ಜತೆಗೆ ಸರಕಾರಕ್ಕೆ ಅಭಿವೃದ್ಧಿ ದೃಷ್ಟಿಯಿಂದ ಉಪಯುಕ ಸಲಹೆಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಸೋಮವಾರ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಉತ್ತರ ಕರ್ನಾಟಕದ ಕುರಿತ ವಿಶೇಷ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು. ನೂತನ ಸದಸ್ಯರು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಂಡು ಚರ್ಚೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನು ಸರಕಾರಕ್ಕೆ ನೀಡಬೇಕು ಎಂದು ಸ್ಪೀಕರ್ ಖಾದರ್ ಸಲಹೆ ಮಾಡಿದರು. ಡಿ.೧೭ರ ಮಂಗಳವಾರ ಉಳಿದೆಲ್ಲ ಶಾಸಕರಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಬುಧವಾರ(ಡಿ.೧೮) ಈ ವಿಶೇಷ ಚರ್ಚೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಲಿದ್ದಾರೆ ಎಂದು ಖಾದರ್ ತಿಳಿಸಿದರು.