ಚಾಮರಾಜನಗರ: ಜಿಲ್ಲೆಯಲ್ಲಿ ವಾಣಿಜ್ಯ, ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ಜುಲೈ ೨೭ ರಿಂದ ಆಗಸ್ಟ್ ೪ ರವರೆಗೆ ವಿವಿಧ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಸುವ ಸದುದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಕೊಳ್ಳೆಗಾಲ ಪಟ್ಟಣದ ಎಂ.ಜಿ.ಎಸ್.ವಿ. ಸರ್ಕಾರಿ ಪದವಿ ಪೂರ್ವ ಕಾಲೇಜು, ಜಯ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರದ ಸುತ್ತಲ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಲಂ ೧೪೪ ರನ್ವಯ ಪರೀಕ್ಷಾ ದಿನಗಳಂದು ಬೆಳಿಗ್ಗೆ ೬ ರಿಂದ ಸಂಜೆ ೬ ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನಗಳಂದು ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ಮುಚ್ಚಲು ಸಹ ಆದೇಶಿಸಲಾಗಿದೆ.
ನಿಷೇಧಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.