ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಆಯುರ್ ಮಟಂ ಆಯುರ್ವೇದ ಹೆಲ್ತ್ ವಿಲೇಜ್ ಇವರ ಸಹಯೋಗದೊಂದಿಗೆ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಜೂನ್ ೨೧ ಬೆಳಿಗ್ಗೆ ೬.೩೦ ರಿಂದ ೮ ಗಂಟೆಯವರೆಗೆ ಕೃಷ್ಣರಾಜಸಾಗರದ ಬೃಂದಾವನ ಗಾರ್ಡನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಬೇಬಿಮಠ ಮತ್ತು ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಡಾ.ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜು, ಕೆ.ಎಂ ಉದಯ್, ಕೆ.ಆರ್.ಎಸ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೆ.ನರಸಿಂಹ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ ಜಾಫರ್ ಭಾಗವಹಿಸಲಿದ್ದಾರೆ.