ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇದೀಗ ಮುಷ್ಕರ ಆರಂಭಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದ್ದು, ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇರುವುದರ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.
ಸಾರಿಗೆ ನೌಕರರು ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೂ ಕೂಡ ತೊಂದರೆ ಉಂಟಾಗಲಿದೆ. ನಿತ್ಯ ಸಾರಿಗೆ ಬಸ್ಗಳಲ್ಲಿ ಸಂಚರಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಪರದಾಟ ನಡೆಸುವ ಸಾಧ್ಯತೆ ಇದ್ದು, ಖಾಸಗಿ ವಾಹನಗಳ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಶಾಲಾ ಕಾಲೇಜುಗಳಿಗೆ ಇಂದು ರಜೆ ಇರುವುದಿಲ್ಲ ಎಂದು ತಿಳಿದುಬಂದಿದೆ.