ರಾಮನಗರ: ರೇಷ್ಮೆನಾಡು ರಾಮನಗರದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ರೈತ ಸಂಘಟನೆಗಳಿಂದ ರಾಮನಗರ ಬಂದ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಾಯಿ ಬಡಿದುಕೊಂಡು ಮತ್ತೆ ಹುಟ್ಟಿ ಬರಬೇಡಿ ಎಂದು ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಮೇಶ ಗೌಡ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ನಗರದ ಕೆಂಗಲ್ ಹನುಮಂತಯ್ಯನವರ ವೃತ್ತದಲ್ಲಿ ರೈತ ಸಂಘ ಹಾಗೂ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ರಕ್ತ ಚಳವಳಿ ನಡೆಸಿದ್ದಾರೆ. ಸಿರಿಂಜ್ ಮೂಲಕ ರಕ್ತ ತೆಗೆದು ರಸ್ತೆಯಲ್ಲಿ ಚೆಲ್ಲುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಮಗೆ ನೀರಿಲ್ಲದ ವೇಳೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಿಲ್ಲ. ಇದೇ ವೇಳೆ ರಾಮನಗರ ಜಿಲ್ಲಾ ವಕೀಲರ ಸಂಘ ಕೂಡ ಕಲಾಪ ಬಹಿಷ್ಕರಿಸಿ ಕಾವೇರಿ ಹೋರಾಟ ಬೆಂಬಲ ನೀಡಿ, ಪ್ರತಿಭಟನೆ ನಡೆಸಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಬೆಂಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಪೊಲೀಸರು ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.