ಬೆಂಗಳೂರು: ತುಂಗಭದ್ರಾ ಜಲಾಶಯದ ೧೯ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ, ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ ೧೯ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ ಎಂದಿದ್ದಾರೆ. ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ? ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಕಿಡಿಕಾರಿದರು.