ಮೈಸೂರು: ಗಲ್ಫ್ ಪ್ರದೇಶದ ಸಂಘರ್ಷಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸು ಕರೆತರುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ವಾಪಸು ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ ಎಂದು ತಿಳಿಸಿದರು.
ಅದೇ ರೀತಿ ಈ ಬಾರಿಯೂ ಜನರನ್ನು ಸುರಕ್ಷಿತವಾಗಿ ವಾಪಸು ಕರೆತರಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಪ್ರಧಾನಮಂತ್ರಿಗಳು ಈಗಾಗಲೇ ಅಗತ್ಯ ಕ್ರಮಗಳನ್ನು ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ಯುದ್ಧ ಸಮಾನ ಪರಿಸ್ಥಿತಿ ಎದುರಿಸುತ್ತಿರುವ ರಾಷ್ಟ್ರಗಳಲ್ಲಿ, ವಿಶೇಷವಾಗಿ ದುಬೈ ಸೇರಿದಂತೆ ಹಲವು ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ನಾನು ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ. ಅವರೆಲ್ಲರೂ ಸುರಕ್ಷಿತರಾಗಿದ್ದು, ಆತಂಕಪಡುವ ಅಗತ್ಯವಿಲ್ಲ. ಅವರನ್ನು ಸುರಕ್ಷಿತವಾಗಿ ವಾಪಸು ಕರೆತರಲಾಗುತ್ತದೆ ಎಂದು ಆತಂಕದಲ್ಲಿರುವ ಕುಟುಂಬಸ್ಥರಿಗೆ ಧೈರ್ಯ ನೀಡಿದ್ದಾರೆ.



