ಗುಂಡ್ಲುಪೇಟೆ: ಗ್ರಾಮೀಣ ಭಾಗದ ಜನರು ಸರ್ಕಾರಿ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ಸಂಯೋಜಕಿ ಪ್ರತಿಮಾ ಸಲಹೆ ನೀಡಿದರು.
ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ವತಿಯಿಂದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಸರ್ಕಾರಿ ಸೌಲಭ್ಯ ಪಡೆಯಲು ಅರ್ಜಿಗಳನ್ನು ಹಾಕಬೇಕು ಎಂದು ತಿಳಿಸಿದರು.
ಸರ್ಕಾರದ ಯೋಜನೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಇದರಿಂದ ಮಾಹಿತಿ ಕೊರತೆಯೇ ಕಾರಣ. ಆದ್ದರಿಂದ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಜನರಿಗೆ ಸರ್ಕಾರಿ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪುವಂತೆ ಮಾಹಿತಿ ನೀಡುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಸುರೇಶ್, ಚಿಕ್ಕಹನುಮಮ್ಮ, ಪಿಡಿಓ ಮಹಾದೇವಯ್ಯ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ಕಾವ್ಯ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.