Friday, April 4, 2025
Google search engine

Homeಅಪರಾಧಕಾನೂನುವಾಲ್ಮೀಕಿ ನಿಗಮದ ಹಗರಣ: ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ನಿರ್ದೇಶನ

ವಾಲ್ಮೀಕಿ ನಿಗಮದ ಹಗರಣ: ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ನಿರ್ದೇಶನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿರುವ ಎಫ್‌ಐಆರ್‌ ಕುರಿತು ಇಲ್ಲಿಯವರೆಗೆ ನಡೆಸಿರುವ ತನಿಖೆಯ ವರದಿಯನ್ನು ಡಿಸೆಂಬರ್‌ 22ಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಹಾಗೂ ಮಾಜಿ ಶಾಸಕರಾದ ಅರವಿಂದ್‌ ಲಿಂಬಾವಳಿ ಮತ್ತು ಕುಮಾರ ಬಂಗಾರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಇಂದು ವಿಚಾರಣೆ ನಡೆಸಿತು.

“ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಅವರಿಗೆ ನೋಟಿಸ್‌ ಪಡೆಯಲು ನಿರ್ದೇಶಿಸಲಾಗಿದೆ. ಪ್ರಕರಣದಲ್ಲಿ ಸಿಬಿಐ ಇಲ್ಲಿಯವರೆಗೆ ನಡೆಸಿರುವ ತನಿಖೆಗೆ ಸಂಬಂಧಿಸಿದ ವರದಿಯನ್ನು ಡಿಸೆಂಬರ್‌ 22ಕ್ಕೆ ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ.

ಅರ್ಜಿದಾರರ ಪರ ವಕೀಲ ವೆಂಕಟೇಶ್‌ ದಳವಾಯಿ ಅವರು “ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ದೂರಿನ ಅನ್ವಯ ಸಿಬಿಐ ಜೂನ್‌ 3ರಂದು ಎಫ್‌ಐಆರ್‌ ದಾಖಲಿಸುವುದಕ್ಕೂ ಮುನ್ನ ಯತ್ನಾಳ್‌ ಅವರು ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು. ಸಿಬಿಐ ಎಫ್‌ಐಆರ್‌ ದಾಖಲಿಸಿ ಐದು ತಿಂಗಳಾದರೂ ತನಿಖೆ ಆರಂಭಿಸಿಲ್ಲ. ಇಂಥ ಪ್ರಕರಣಗಳಲ್ಲಿ ಹೈಕೋರ್ಟ್‌ ನಿಗಾ ಇಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ” ಎಂದರು.

ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜ ಪಿ ಪ್ರಸನ್ನ ಕುಮಾರ್‌ ಅವರು “ಸಿಬಿಐ ತನಿಖೆಗೆ ವಹಿಸಬೇಕು ಎಂದು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ಸಂಬಂಧ ತಮ್ಮ ಆದೇಶಕ್ಕಾಗಿ ಕಾಯುತ್ತಿದ್ದೆವು. ಈಗ ನಿಮ್ಮ ಆದೇಶ ಬಂದಿರುವುದರಿಂದ ತನಿಖೆ ಆರಂಭಿಸಿದ್ದೇವೆ. ಈ ಪ್ರಕರಣದಲ್ಲಿ ನಾನು ನೋಟಿಸ್‌ ಪಡೆಯುತ್ತೇನೆ” ಎಂದರು.

ಜೂನ್‌ 3ರಂದು ಸಿಬಿಐ ದಾಖಲಿಸಿಕೊಂಡಿರುವ ಎಫ್‌ಐಆರ್‌ ಸಂಬಂಧ ತನಿಖೆ ಚುರುಕುಗೊಳಿಸಿ, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು. ಸಿಬಿಐ ಅಂತಿಮ ವರದಿ ಸಲ್ಲಿಸದ ತಕ್ಷಣ ಪ್ರಕ್ರಿಯೆಯನ್ನು ಆರಂಭಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

RELATED ARTICLES
- Advertisment -
Google search engine

Most Popular