ಚಿತ್ರದುರ್ಗ: ಇದೇ ಅ. 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯ ದ್ವೀತಿಯ ದರ್ಜೆ ಸಹಾಯಕರು ಹಾಗೂ ಕಿರಿಯ ಸಹಾಯಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ತ್ರಿ ಸಮಿತಿ ಸದಸ್ಯರು, ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಈ ಕುರಿತು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ 20 ಕೇಂದ್ರಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯಲಿದೆ. ಒಟ್ಟು 7800 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಜಾಗರೂಕತೆ ವಹಿಸಬೇಕು. ಪರೀಕ್ಷಾ ಕೇಂದ್ರ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಶೈಕ್ಷಣಿಕ ಪರೀಕ್ಷೆಗಳಿಗಿಂತಲೂ ನೇಮಕಾತಿ ಪರೀಕ್ಷೆಗಳು ಭಿನ್ನವಾಗಿರುತ್ತವೆ. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾದ ಅಧಿಕಾರಿಗಳನ್ನು ಹೊರತು ಪಡಿಸಿ ಅನ್ಯ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಪರೀಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಹೇಳಿದರು.
ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷೆ ಸಂಬಂಧ ಸೂಕ್ತ ತರಬೇತಿ ನೀಡಲಾಗಿದೆ. ಪ್ರತಿ ಕೊಠಡಿಯಲ್ಲೂ 24 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂಧ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ತಿಳಿಸಿದರು. ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ಖಜಾನಾಧಿಕಾರಿ ರಮೇಶ್, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.