ಮೈಸೂರು: ಆಶಾಗಳ ದುಡಿಮೆಗೆ ಕನ್ನ ಹಾಕುವ ಈಗಿರುವ ವೇತನ ಪಾವತಿ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾಸಿಕ ವೇತನ ೧೫ ಸಾವಿರ ನಿಗದಿ ಪಡಿಸಬೇಕು ಎಂಬಿವೇ ಮೊದಲಾದ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಫೆ.೧೩ ಮತ್ತು ೧೪ರಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ತಿಳಿಸಿದರು.
ಅ೦ದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ೨೦ ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ೨೦೧೯-೨೧ರವರೆಗಿನ ಕೋವಿಡ್ ವಿಶೇಷ ಪ್ರೋತ್ಸಾಹ ಧನ ಹಾಗೂ ನಾನ್ ಎಂಸಿಟಿಎಸ್ ಹಣ ೨೦೦೦ ರೂ.,ಗಳನ್ನು ಎಲ್ಲಾ ಆಶಾಗಳಿಗೆ ಪಾವತಿಸಬೇಕು. ಆಶಾ ಕಾರ್ಯಕ್ರಮದಲ್ಲಿ ಫೆಸಿಲಿಟೇಟರ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಅವರ ಹುದ್ದೆಗೆ ತಕ್ಕಂತೆ ಮಾಸಿಕ ವೇತನ, ಪ್ರಯಾಣ ಭತ್ಯೆ ಹೆಚ್ಚಿಸಬೇಕು. ಆಶಾಗಳ ಸಂಖ್ಯೆಗೆ ಅನುಗುಣವಾಗಿ ಆಶಾ ಸುಗಮಗಾರರನ್ನು ನೇಮಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು.