Monday, April 21, 2025
Google search engine

Homeರಾಜ್ಯನೀರಿನ ಕೊರತೆ ಹಿನ್ನೆಲೆ ಐ.ಟಿ ಕಂಪನಿಗಳಿಗೆ ಗಾಳ: ಸಚಿವ ಎಂ.ಬಿ ಪಾಟೀಲ

ನೀರಿನ ಕೊರತೆ ಹಿನ್ನೆಲೆ ಐ.ಟಿ ಕಂಪನಿಗಳಿಗೆ ಗಾಳ: ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಇಂತಹ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂದು ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, `ಕೇರಳದ ಕೈಗಾರಿಕಾ ಸಚಿವ ಪಿ.ರಾಜೀವ್ ಅವರು ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರನ್ನು ಬಿಟ್ಟು ತಮ್ಮ ರಾಜ್ಯಕ್ಕೆ ಬಂದು ನೆಲೆಯೂರುವಂತೆ ಐಟಿ ಕಂಪನಿಗಳಿಗೆ ಆಹ್ವಾನಿಸಿರುವ ಸಂಗತಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಂದು ರೀತಿ ಕುಚೋದ್ಯದ ನಡೆ ಎಂದು ಟೀಕಿಸಿದ್ದಾರೆ.

ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅಂದಮೇಲೆ, ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಕೊನೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಈ ವರ್ಷ ಜಗತ್ತಿನ ಎಲ್ಲೆಡೆಗಳಲ್ಲೂ ನೀರಿನ ಕೊರತೆ ಕಾಣಿಸಿಕೊಂಡಿದೆ. ಇದಕ್ಕೆ ಕೇರಳವೂ ಹೊರತಲ್ಲ. ಬೆಂಗಳೂರಿನಲ್ಲಿ ಐ.ಟಿ. ಕಂಪನಿಗಳು ನೆಲೆಯೂರಿರುವ ಪ್ರದೇಶಗಳಲ್ಲಿ ಕೂಡ ಗಂಭೀರ ಸ್ವರೂಪದಲ್ಲೇನೂ ನೀರಿನ ಕೊರತೆ ಕಾಣಿಸಿಕೊಂಡಿಲ್ಲ. ಜತೆಗೆ ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು ಎಂದು ಅವರು ಸಲಹೆ ನೀಡಿದ್ದಾರೆ. ಕೇರಳ ಒಂದು ರಾಜ್ಯವಾಗಿ ಎಷ್ಟು ಬೇಕಾದರೂ ಬಂಡವಾಳ ಆಕರ್ಷಿಸಲಿ. ಆ ಸ್ವಾತಂತ್ರ್ಯ ಅವರಿಗಿದೆ. ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಸರಿಯಲ್ಲ ಎಂದು ಪಾಟೀಲ ಟೀಕಿಸಿದ್ದಾರೆ.

RELATED ARTICLES
- Advertisment -
Google search engine

Most Popular