ಮಂಡ್ಯ: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜೂ.೧೨ ರಂದು ಜಾಥಾ ಮತ್ತು ವೇದಿಕೆ ಕಾರ್ಯಕ್ರಮವನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಹೋಟೆಲ್, ಕಟ್ಟಡ ನಿರ್ಮಾಣ, ಗಣಿಗಾರಿಕೆ ಹಾಗೂ ಮುಂತಾದ ಸ್ಥಳಗಳಲ್ಲಿ ಹೆಚ್ಚಿನ ದಾಳಿಗಳನ್ನು ನಡೆಸಿ ಬಾಲ ಕಾರ್ಮಿಕರನ್ನು ಪತ್ತೆಹಚ್ಚಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ ಎಂದರು. ಶಾಲೆಯಿಂದ ಹೊರಗುಳಿಯುವ ಮಕ್ಕಳು ಹೆಚ್ಚಾಗಿ ಬಾಲ ಕಾರ್ಮಿಕರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಶಾಲೆಗೆ ದೀರ್ಘವಧಿ ಗೈರು ಹಾಜರಾಗುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಿ ಎಂದರು. ೨೦೨೩-೨೪ ನೇ ಸಾಲಿನ ಜಿಲ್ಲೆಯಲ್ಲಿ ಒಟ್ಟು ೨೨ ಬಾಲ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರನ್ನು ಶಾಲೆಗೆ ಸೇರ್ಪಡಿಸಲಾಗಿದೆ. ಅವರ ಪೋಷಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಮತ್ತೆ ಆ ಮಕ್ಕಳು ಬಾಲ ಕಾರ್ಮಿಕರಾಗದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಮಹೇಶ್, ಕಾರ್ಮಿಕ ಇಲಾಖೆಯ ಅಧಿಕಾರಿ ಚೇತನ್ ಕುಮಾರ್, ನಗರಸಭೆ ಪೌರಾಯುಕ್ತ ಆರ್ ಮಂಜುನಾಥ್, ಆರ್. ಸಿ. ಎಚ್. ಅಧಿಕಾರಿ ಡಾ. ಅನಿಲ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.